ಉತ್ತರ ಕನ್ನಡ ಜಿಲ್ಲೆಯ ವಿವಿಧ ಪುರಸಭೆ, ಪಟ್ಟಣ ಪಂಚಾಯತ ಹಾಗೂ ನಗರಸಭೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರ ಬಿಲ್ ಬಾಕಿ ಪಾವತಿ, ಅನುಮೋದಿತ ಕ್ರಿಯಾ ಯೋಜನೆಗಳ ಕಾಮಗಾರಿಗೆ ತಡೆ ಸೇರಿ ವಿವಿಧ ವಿಷಯಗಳ ಕುರಿತು ಗರಂ ಆಗಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಹಲವು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕುಡಿಯುವ ನೀರಿನ ಅನುಮೋದಿತ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
`ಜಿಲ್ಲೆಯಲ್ಲಿನ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಮೋದಿತ ಕ್ರಿಯಾ ಯೋಜನೆಗಳ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿವೆ. ಅನುಮೋದನೆ ನೀಡಿದ ನಂತರವು ವಿಳಂಬ ಧೋರಣೆ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಅನಿವಾರ್ಯ’ ಎಂದು ಎಚ್ಚರಿಸಿದರು. ಫೆಬ್ರವರಿ ಮೊದಲನೇ ವಾರದಲ್ಲಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಇನ್ನೂ `ಕಾಮಗಾರಿಗಳು ಪೂರ್ಣಗೊಂಡ ಕೂಡಲೇ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಬೇಕು’ ಎಂದು ಸೂಚಿಸಿದರು. `ನಗರ ಸ್ಥಳೀಯ ಸಂಸ್ಥೆಗಳು ಕಾಮಗಾರಿ ಪೂರ್ಣಗೊಂಡರೂ ಹಣ ಪಾವತಿ ಮಾಡದೇ ಇರುವುದರಿಂದ ಆರ್ಥಿಕ ಪ್ರಗತಿ ಕುಂಠಿತವಾಗಿದೆ’ ಎಂದವರು ಹೇಳಿದರು. 15ನೇ ಹಣಕಾಸು ಯೋಜನೆಯಡಿ ಬಾಕಿ ಉಳಿದಿರುವ 17 ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಶೇ 100ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸುವಂತೆ ಸೂಚಿಸಿದರು. `ಯಾವ ಅಧಿಕಾರಿ ಕೆಲಸ ಮಾಡುತ್ತಿಲ್ಲವೋ ಆ ಅಧಿಕಾರಿಗೆ ನೋಟಿಸ್ ನೀಡಿ’ ಎಂದು ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಸ್ಟೇಲಾ ವರ್ಗಿಸ್ ಅವರಿಗೆ ನಿರ್ದೇಶನ ನೀಡಿದರು.
`ನಗರಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ 2 ಲಕ್ಷದವರೆಗೆ ಕಾಮಗಾರಿಗಳಿಗೆ ಮಂಜೂರಾತಿ ನೀಡಲು ಅವಕಾಶವಿದ್ದು, 2 ಲಕ್ಷದೊಳಗಿನ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ಎಲ್ಲಾ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಕಾರ್ಯಪ್ರರ್ವತರಾಗಬೇಕು’ ಎಂದು ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಸ್ಟೇಲಾ ವರ್ಗಿಸ್ ಹೇಳಿದರು. ಈ ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಕೆ ರವಿಕುಮಾರ, ಸಹಾಯಕ ಕಾರ್ಯಪಾಲಕ ಅಭಿಯಂತರ ಭಾಸ್ಕರ ಗೌಡ ಇತರರು ಇದ್ದರು.



