ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಜೋಯಿಡಾ, ಮುಂಡಗೋಡ, ಸಿದ್ದಾಪುರ, ಬನವಾಸಿ ಭಾಗದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮೀಟರ್ ಬಡ್ಡಿ ವ್ಯವಹಾರ ನಡೆಯುತ್ತಿದೆ.
`ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಗ್ಗೆ 9ಗಂಟೆಗೂ ಮುನ್ನ ಸಂಜೆ 6ರ ನಂತರ ಸಾಲಗಾರರ ಮನೆಗೆ ಹೋಗಬಾರದು’ ಎಂಬ ನಿಯಮವಿದೆ. ಆದರೆ, ಈ ನಿಯಮ ಎಲ್ಲಿಯೂ ಪಾಲನೆ ಆಗುತ್ತಿಲ್ಲ. `ಸಾಲಗಾರರ ಮೇಲೆ ದೌರ್ಜನ್ಯಗಳನ್ನು ನಡೆಸಬಾರದು’ ಎಂದು ಕಾನೂನು ಹೇಳುತ್ತದೆ. ಆದರೆ, ಅದನ್ನು ಪಾಲಿಸುವವರಿಲ್ಲ. ಜಿಲ್ಲೆಯಲ್ಲಿ 201 ಮೈಕ್ರೋ ಫೈನಾನ್ಸ್ ಸಂಸ್ಥೆಗಳಿದ್ದು ನಿಯಮ ಮೀರಿ ವರ್ತಿಸಿದ ಲೇವಾದೇವಿದಾರರ ವಿರುದ್ಧ ಪೊಲೀಸರು 7 ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಂಥವರಿಗೆ ಈವರೆಗೆ 37 ಲಕ್ಷ ರೂ ಹಣವನ್ನು ವಶಕ್ಕೆ ಪಡೆದಿದ್ದು, ಸಾಲ ವಸೂಲಾತಿಗೆ ಕ್ರಿಮಿನಲ್ ಹಿನ್ನಲೆ ಉಳ್ಳವರನ್ನು ಬಳಸಿಕೊಂಡವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದೆ.
ಇದರೊಂದಿಗೆ `ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಲೇವಾದೇವಿ ವ್ಯವಹಾರಸ್ಥರು, ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಯವರು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿ ಹಾಗೂ ನಿಯಮಗಳನ್ನು ಉಲ್ಲಂಘಸಿದರೆ ಕಠಿಣ ಕ್ರಮ ಅನಿವಾರ್ಯ’ ಎಂದು ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಎಚ್ಚರಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆ ನಡೆಸಿದ ಅವರು `ರಾಜ್ಯದಾದ್ಯಂತ ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ಕಿರುಕುಳದಂತಹ ಪ್ರಕರಣಗಳು ಅಧಿಕವಾಗಿವೆ. ಆರ್‌ಬಿಐ ಮಾರ್ಗಸೂಚಿಗಳು ಹಾಗೂ ನಿಯಮಗಳ ಪಾಲಿಸದಿರುವ ದೂರು ಹೆಚ್ಚಿವೆ. ಮೈಕ್ರೋ ಫೈನಾನ್ಸ್ಗಳು ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರಗಳನ್ನು ಪರಿಶೀಲನೆ ನಡೆಸಬೇಕು. ಅವರ ಆದಾಯದ ಶೇ 50ರಷ್ಟು ಮಾತ್ರ ಸಾಲ ನೀಡಬೇಕು’ ಎಂದು ಸೂಚಿಸಿದರು.
`ಸಾಲ ಪಡೆಯುವವರ ಸಾಮರ್ಥ್ಯ ನೋಡದೇ ಸಾಲ ನೀಡಿ ನಂತರ ಅವರಿಗೆ ಕಿರುಕುಳ ಕೊಡುವುದು ಗಮನಕ್ಕೆ ಬಂದಿದ್ದು, ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರಿಗೂ ಆರ್ಥಿಕ ಶಿಸ್ತು ಅಗತ್ಯ’ ಎಂದರು. `ಆರ್‌ಬಿಐ ಮಾರ್ಗಸೂಚಿಯ ಪ್ರಕಾರ ಮೈಕ್ರೋ ಫೈನಾನ್ಸ್ಗಳು 3 ಲಕ್ಷ ರೂವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ಮರುಪಾವತಿಯನ್ನು ಕಾನೂನಿನ ಅನ್ವಯ ಕ್ರಮಗಳನ್ನು ಕೈಗೊಳ್ಳಬೇಕು. ಒಬ್ಬನೇ ವ್ಯಕ್ತಿಗೆ ಹಲವು ಸಾಲಗಳನ್ನು ನೀಡಬಾರದು. ಸಾಲ ಮತ್ತು ಬಡ್ಡಿಯ ವಿವರಗಳನ್ನು ಸ್ಪಷ್ಟವಾಗಿ ತಿಳಿಸಿ, ಒಪ್ಪಿಗೆ ಪತ್ರ ಪಡೆದು ಸಾಲ ನೀಡಬೇಕು. ಕಾನೂನನ್ನು ಉಲ್ಲಂಘಿಸಿ, ಸಾಲಗಾರರ ಮೇಲೆ ದೌರ್ಜನ್ಯ, ಅವರ ಗೌರವಕ್ಕೆ ಧಕ್ಕೆಯಾಗುವಂತೆ ಕೆಟ್ಟ ಪದಗಳಲ್ಲಿ ಬೈಯುವುದು, ಫೋನ್ ಮಾಡಿ ಬೆದರಿಸುವುದು, ದಬ್ಬಾಳಿಕೆ, ಕಿರುಕುಳ ನೀಡುವುದು ಮಾಡಿದ್ದಲ್ಲಿ ಅಂತಹವರ ವಿರುದ್ಧ ಕ್ರಮ ಅನಿವಾರ್ಯ’ ಎಂದು ಪುನರುಚ್ಚರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಜಗದೀಶ್, ಲೀಡ್ ಬ್ಯಾಂಕ್ ಮೆನೇಜರ್ ಭಾರತಿ ವಸಂತ್, ಸಹಕಾರ ಇಲಾಖೆ ಸಹಾಯಕ ನಿಬಂಧಕ ಶ್ರೀನಿವಾಸ್ ಸಜ್ಜನ, ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿದ್ದರು.
ಸಾಲದ ವಿಷಯವಾಗಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..