`ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿಮಾರ್ಣ ವಿಷಯವಾಗಿ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ, ಆಸ್ಪತ್ರೆ ಮಂಜೂರು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.
`ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಬಹು ದಿನದ ಕನಸಾಗಿದೆ. ಇದನ್ನು ನಿರ್ಮಾಣ ಮಾಡಲು ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಜನರ ಒತ್ತಾಯವಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುವೆ. ಇನ್ನೂ ಕೆಲವೇ ದಿನಗಳಲ್ಲಿ ಕ್ರಿಮ್ಸ್ನಲ್ಲಿ 450 ಹಾಸಿಗೆಯ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದು, ಅದಕ್ಕೆ ಬೇಕಾದ ಉಪಕರಣ ಅಳವಡಿಸುವ ಕಾರ್ಯ ನಡೆಯುತ್ತಿದೆ’ ಎಂದರು.
`ಪ್ರಸ್ತುತ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರೂ 3.75 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಅವಶ್ಯವಿರುವ ಲಿನ್ಯಾಕ್ ಬಂಕರ್ ನಿರ್ಮಿಸಲಿದ್ದು, ಮುಂದಿನ ಎರಡು ತಿಂಗಳೊಳಗಾಗಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ’ ಎಂದರು. `ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಯಿಂದ ಸ್ಥಳೀಯ ಜನರ ಚಿಕಿತ್ಸೆಗೆ ಅನುಕೂಲವಾಗಲಿದ್ದು, ಚಿಕಿತ್ಸೆಗಾಗಿ ಪಕ್ಕದ ಜಿಲ್ಲೆ ಹಾಗೂ ಹೊರ ರಾಜ್ಯಕ್ಕೆ ಚಿಕಿತ್ಸೆ ತೆರಳುವುದು ತಪ್ಪಲಿದೆ’ ಎಂದರು.
`ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಶೀಘ್ರದಲ್ಲಿ ಎಂಆರ್‌ಐ ಯಂತ್ರವನ್ನು ಒದಗಿಸಲಾಗುವುದು. ಈ ಮೂಲಕ ಜಿಲ್ಲಾ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲಾಗುವುದು. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದ್ದು, ರಾಜ್ಯದಲ್ಲಿ ಈಗಾಗಲೇ 71 ಮೆಡಿಕಲ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದೆ. ಇದರಲ್ಲಿ 24 ಸರ್ಕಾರಿ ಮೆಡಿಕಲ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರದ ವತಿಯಿಂದ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವ ಮೂಲಕ ಸ್ಥಳೀಯರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ಹಾಗೂ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಒದಗಿಸುವ ಗುರಿ ಹೊಂದಲಾಗಿದೆ’ ಎಂದರು.