ಕೈಗಾ ಅಣು ವಿದ್ಯುತ್ ಘಟಕದಲ್ಲಿ ಅವಘಡ ನಡೆದರೆ ಅನುಸರಿಸಬೇಕಾದ ಮಾರ್ಗದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಕ್ಕಾಗಿ ಮಾರ್ಚ 5ರಂದು ಅಣಕು ಕಾರ್ಯಾಚರಣೆ ನಡೆಯಲಿದೆ.
`ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಮಾರ್ಚ್ 5ರಂದು ನಡೆಯುವ ಅಣಕು ಕಾರ್ಯಾಚರಣೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡಬಾರದು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಸೂಚನೆ ನೀಡಿದ್ದಾರೆ. `ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ವಿಪತ್ತು ಸಂಭವಿಸಿದಲ್ಲಿ ಅದನ್ನು ಎದುರಿಸುವ ಕುರಿತಂತೆ ಮಾರ್ಚ 5ರಂದು ಬೆಳಗ್ಗೆ 9 ಗಂಟೆಗೆ ಅಣಕು ಕಾರ್ಯಾಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು ತಮಗೆ ವಹಿಸಲಾದ ಕಾರ್ಯಗಳನ್ನು ನಿರ್ವಹಿಸಬೇಕು’ ಎಂದವರು ಹೇಳಿದರು.
`ಕಾರ್ಯಚರಣೆ ಸಂದರ್ಭದಲ್ಲಿ ಕೈಗಾದಿoದ ಬರುವ ನಿರ್ದೆಶನಗಳನ್ನು ಎಲ್ಲರೂ ಅಚ್ಚುಕಟ್ಟಾಗಿ ಪಾಲಿಸಬೇಕು. ಕಾರ್ಯಾಚರಣೆಗೆ ಸನ್ನದ್ಧವಾದ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಅಣಕು ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಬೇಕು’ ಎಂದು ಸೂಚಿಸಿದರು. ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮನವರ, ಎನ್‌ಡಿಆರ್‌ಎಫ್ ಇನ್ಸಪೆಕ್ಟರ್ ಜೆಡಿ ಪ್ರದೀಪ ಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತಿತರರು ಇದ್ದರು.