ಹಿರೇಕೆರೂರು ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದಕ್ಕೆ ವಿರೋಧ; ನಾಳೆ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ
ಹಿರೇಕೆರೂರು: 2026-27ನೇ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹಿರೇಕೆರೂರು ತಾಲೂಕನ್ನು ಕೈಬಿಡಲಾಗಿದೆ ಎಂದು ಆರೋಪಿಸಿ, ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಿ ಸೆ.19ರಂದು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲು ಮಾಜಿ ಕೃಷಿ ಸಚಿವ ಹಾಗೂ ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ್ ಕರೆ ನೀಡಿದ್ದಾರೆ.
ಸೆಪ್ಟೆಂಬರ್ 19, ಶನಿವಾರ ಬೆಳಿಗ್ಗೆ 10 ಗಂಟೆಗೆ ಹಿರೇಕೆರೂರು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಬಳಿಕ ತಹಸೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಹಿರೇಕೆರೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದರಿಂದ ತಾಲೂಕಿನ ರೈತರಿಗೆ ತೀವ್ರ ಅನ್ಯಾಯವಾಗಿದೆ ಎಂದು ಅವರು ಹೇಳಿದ್ದಾರೆ. ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟದಲ್ಲಿದ್ದು, ತಾಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ತಾಲೂಕಿನ ಎಲ್ಲ ರೈತ ಬಾಂಧವರು, ಪಕ್ಷದ ಮುಖಂಡರು, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಸದಸ್ಯರು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ಮಾಜಿ ಸದಸ್ಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಬಿ.ಸಿ. ಪಾಟೀಲ್ ಮನವಿ ಮಾಡಿದ್ದಾರೆ.
ವರದಿ: ಶ್ರೀ ಕರ್ನಾಟಕ | ಹಾವೇರಿ




