ಬ್ಯಾಡಗಿ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ
* ಸ್ಥಳದಲ್ಲೇ ಪರಿಶೀಲನೆ ನಡೆಸಿ, ಅಡೆತಡೆಗಳ ನಿವಾರಣೆಗೆ ಕ್ರಮ; ಭಾರಿ ವಾಹನಗಳ ಪ್ರವೇಶ ನಿರ್ಬಂಧಿಸಲು ಪೊಲೀಸ್ ಇಲಾಖೆಗೆ ಸೂಚನೆ
ಹಾವೇರಿ, ಅ.23 :ಬ್ಯಾಡಗಿ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಖುದ್ದಾಗಿ ವೀಕ್ಷಿಸಿ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬ್ಯಾಡಗಿ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕಾಮಗಾರಿಯ ಪ್ರಗತಿ ಹಾಗೂ ಅನುಷ್ಠಾನದಲ್ಲಿ ಎದುರಾಗಿರುವ ಸಮಸ್ಯೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಕಟ್ಟಡಗಳ ಮಾಲೀಕರಿಂದ ವ್ಯಕ್ತವಾಗಿರುವ ತಕರಾರುಗಳು ಹಾಗೂ ಕಾಮಗಾರಿಗೆ ಅಡ್ಡಿಯಾಗಿರುವ ಇತರ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸಿದರು. ಅಲ್ಲದೆ, ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಂಡು, ಕಾಮಗಾರಿಗೆ ಯಾವುದೇ ರೀತಿಯ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಅಗಲೀಕರಣ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಕಾಮಗಾರಿಯ ವೇಗವನ್ನು ಹೆಚ್ಚಿಸಬೇಕು. ಕಾಮಗಾರಿಗೆ ಸಂಬಂಧಿಸಿದಂತೆ ಎದುರಾಗುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಿ, ಸಾರ್ವಜನಿಕರಿಗೆ ಶೀಘ್ರದಲ್ಲೇ ಸುಗಮ ಸಂಚಾರದ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ
ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುತ್ತಿರುವ ರಸ್ತೆ ಮಾರ್ಗದಲ್ಲಿ ಭಾರಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಾಹನಗಳ ಸಂಚಾರವನ್ನು ಸೂಕ್ತವಾಗಿ ನಿಯಂತ್ರಿಸುವ ಮೂಲಕ ಕಾಮಗಾರಿ ಸುಗಮವಾಗಿ ನಡೆಯಲು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ

ರಸ್ತೆ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು, ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳಿಗೆ ಅನಗತ್ಯ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಕಾಮಗಾರಿ ಸ್ಥಳದಲ್ಲಿ ಸಂಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಗತ್ಯ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಕಾಮಗಾರಿ ಸ್ಥಳದಲ್ಲಿ ಎದುರಾಗುವ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಸಾರ್ವಜನಿಕರಿಗೆ ಆಗುವ ಅನಾನುಕೂಲಗಳನ್ನು ಸಾಧ್ಯವಾದಷ್ಟು ಕಡಿಮೆಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಬ್ಯಾಡಗಿ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಂಡಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವುದರ ಜತೆಗೆ ಸಾರ್ವಜನಿಕರ ದೈನಂದಿನ ಓಡಾಟವೂ ಸುಗಮವಾಗಲಿದೆ. ಆದ್ದರಿಂದ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.








