ವಿದ್ಯಾರ್ಥಿ ನಿಲಯಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿ -ಎಸ್ ಪಿ ಶ್ರೀಮತಿ ಯಶೋಧಾ ವಂಟಗೋಡಿ
ಹಾವೇರಿ: ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದಂತೆ ತಡೆಯಲು ಜಿಲ್ಲೆಯ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಯಶೋಧ ವಂಟಗೋಡಿ ಅವರು ಹೇಳಿದರು. ಮಂಗಳವಾರ ಜಿಲ್ಲಾ ಮಟ್ಟದ ನಾರ್ಕೊ ಕೋ-ಆರ್ಡಿನೇಷನ್ ಸೆಂಟರ್ (ಎನ್ ಸಿಒಆರ್‌ಡಿ) ಸಭೆಯಲ್ಲಿ ವಿಡಿಯೋ ಸಂವಾದದ ಮೂಲಕ ಅವರು ಮಾತನಾಡಿ. ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಶಿಕ್ಷಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ಎಲ್ಲ ವಿದ್ಯಾರ್ಥಿ ನಿಲಯಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಾಸಿಸುವ ಹಾಸ್ಟೆಲ್‌ಗಳನ್ನು ಗುರುತಿಸಿ ಕಾರ್ಯಾಗಾರಗಳನ್ನು ನಡೆಸಬೇಕು ಎಂದು ತಿಳಿಸಿದರು. ಮಾದಕ ವಸ್ತುಗಳ ಬಳಕೆಯ ಅಪಾಯಗಳ ಕುರಿತು ವಿದ್ಯಾರ್ಥಿಗಳಿಗೆ ಕೇವಲ ಉಪನ್ಯಾಸ ನೀಡುವುದಷ್ಟೇ ಅಲ್ಲದೆ, ಅವುಗಳ ಸೇವನೆಯಿಂದ ಭವಿಷ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆಯೂ ಅರಿವು ಮೂಡಿಸಬೇಕು. ಜಾಗೃತಿ ಕಾರ್ಯಕ್ರಮಗಳಿಗೆ ಪೊಲೀಸ್ ಇಲಾಖೆಯೂ ಸಂಪೂರ್ಣ ಸಹಕಾರ ನೀಡಲಿದೆ.

ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಮೂಲಕ ಜಾಗೃತಿ ಮೂಡಿಸಲು ಮುಂದಾಗಲಿದ್ದಾರೆ ಎಂದರು. ಮಾದಕ ವಸ್ತುಗಳ ನಿಯಂತ್ರಣದ ಸಂದರ್ಭದಲ್ಲಿ ಕೇವಲ ಗಾಂಜಾ ಬಳಕೆಯನ್ನಷ್ಟೇ ಗಮನದಲ್ಲಿಟ್ಟುಕೊಳ್ಳದೆ. ಮಕ್ಕಳು ಸೇವಿಸುವ ಚಾಕಲೇಟ್‌ಗಳು ಹಾಗೂ ಇತರೆ ಆಹಾರ ಪದಾರ್ಥಗಳ ಬಗ್ಗೆಯೂ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳಲ್ಲಿ ಅನುಮಾನಾಸ್ಪದ ವಸ್ತುಗಳ ಬಳಕೆ ಅಥವಾ ಮಾದಕ ವ್ಯಸನದ ಲಕ್ಷಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಶಾಲಾ-ಕಾಲೇಜುಗಳು ಮತ್ತು ವಿದ್ಯಾರ್ಥಿ ನಿಲಯಗಳಲ್ಲಿ ನಿರಂತರ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಯುವಜನತೆಯನ್ನು ಮಾದಕ ವಸ್ತುಗಳ ದುಶ್ಚಟಗಳಿಂದ ದೂರವಿಡಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.







