ಕಾರವಾರ: `ಅಂಗನವಾಡಿಯಿoದ ಪ್ರೌಢಶಾಲೆಗಳಲ್ಲಿರುವ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯ ನಿಗಧಿತ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಲ್ಲಾ ವಿದ್ಯಾರ್ಥಿಗಳ ಸಮಗ್ರ ಆರೋಗ್ಯ ತಪಾಸಣೆ ನಡೆಸಬೇಕು. ಯಾವುದೇ ಆರೋಗ್ಯ ಸಂಬoಧಿ ಸಮಸ್ಯೆಗಳು ಕಂಡುಬoದಲ್ಲಿ ತಕ್ಷಣವೇ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಎಲ್ಲಾ ವಿದ್ಯಾರ್ಥಿಗಳಿಗೆ ನಿಗಧಿತ ಲಸಿಕೆಗಳನ್ನು ತಪ್ಪದೇ ನೀಡಿ, ಯಾವುದೇ ವಿದ್ಯಾರ್ಥಿ ಲಸಿಕೆಯಿಂದ ವಂಚಿತರಾಗದoತೆ ಎಚ್ಚರವಹಿಸಿ’ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚಿಸಿದರು.
`ಎಲ್ಲಾ ವಯೋಮಾನದವರಿಗೂ ಯೋಗ್ಯ ರೀತಿಯಲ್ಲಿ ವೈದ್ಯಕೀಯ ಸೇವೆ ಸಿಗಬೇಕು. ಈ ನಿಟ್ಟಿನಲ್ಲಿ ಆರೋಗ್ಯಾಧಿಕಾರಿಗಳು ಕ್ರಮ ಜರುಗಿಸಬೇಕು’ ಎಂದರು. `ವಿವಿಧ ಸಾಂಕ್ರಾಮಿಕ ರೋಗಗಳು ಮತ್ತು ಇತರೆ ಖಾಯಿಲೆಗಳ ಕುರಿತು ವಹಿಸಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸಂಖ್ಯೆಯ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾರ್ವಜನಿಕರಿಗೆ ತಮ್ಮ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ’ ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಯಾವುದೇ ಔಷಧಗಳ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ. ಶಾಲಾ ಮತ್ತು ಕಾಲೇಜು ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆ ಕುರಿತಂತೆ ಇರುವ ನಿಯಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ’ ಎಂದು ಸೂಚಿಸಿದರು.
`ಬಹುತೇಕ ಕಾಯಿಲೆಗಳು ಅನೈರ್ಮಲ್ಯ ಮತ್ತು ಸೊಳ್ಳೆಗಳಿಂದ ಹರಡಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಸೊಳ್ಳೆಗಳ ನಿಯಂತ್ರಣ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಪ್ರತಿ ಶುಕ್ರವಾರ ನಡೆಯುತ್ತಿರುವ ಲಾರ್ವಾ ನಾಶ ಕಾರ್ಯಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕು’ ಎಂದರು.