6

ಅಧಿಕಾರಿಗಳು ಜನರ ಸಮಸ್ಯೆ ಆಲಿಸಬೇಕು: ಶಿವಣ್ಣನವರ

ಬ್ಯಾಡಗಿ, ಸೆ.12: ಜನಸಾಮಾನ್ಯರ ಬಹುದಿನಗಳ ಬೇಡಿಕೆಗಳು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ಆಲಿಸಿ, ಕಾನೂನು ಚೌಕಟ್ಟಿನೊಳಗೆ ತ್ವರಿತವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ‘ಪ್ರಜಾಸೇವೆ’ ಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಸವರಾಜ ಶಿವಣ್ಣನವರ ಹೇಳಿದರು.

ಬ್ಯಾಡಗಿ ಪಟ್ಟಣದ ಶ್ರೀ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ‘ಪ್ರಜಾಸೇವಾ ಆಂದೋಲನ’ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರಜಾಸೇವೆ ಕಾರ್ಯಕ್ರಮ ರೂಪಿಸಲಾಗಿದೆ. ಸಾರ್ವಜನಿಕರು ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿದಾಗ ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಕಾನೂನು ವ್ಯಾಪ್ತಿಯಲ್ಲಿ ಸಮಸ್ಯೆ ಪರಿಹರಿಸಲು ಸಾಧ್ಯವಾಗದಿದ್ದರೆ, ಅದಕ್ಕೆ ಸೂಕ್ತ ಕಾರಣವನ್ನು ಅರ್ಜಿದಾರರಿಗೆ ಸ್ಥಳದಲ್ಲಿಯೇ ತಿಳಿಸಬೇಕು ಎಂದು ಸೂಚಿಸಿದರು.

ಸಣ್ಣಪುಟ್ಟ ಸಮಸ್ಯೆಗಳಿಗೂ ಸಾರ್ವಜನಿಕರು ತಿಂಗಳುಗಟ್ಟಲೆ ತಾಲೂಕು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅದರಲ್ಲೂ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಪರಿಶೀಲಿಸಿ, ತಮ್ಮ ವ್ಯಾಪ್ತಿಯಲ್ಲಿ ಸಾಧ್ಯವಿರುವ ಪರಿಹಾರವನ್ನು ತ್ವರಿತವಾಗಿ ಒದಗಿಸಬೇಕು ಎಂದು ಬಸವರಾಜ ಶಿವಣ್ಣನವರ ಹೇಳಿದರು.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನಸಾಮಾನ್ಯರಿಂದಲೇ ಬಂದವರು. ಅಧಿಕಾರಿಗಳು ತಮ್ಮ ಶಿಕ್ಷಣ ಹಾಗೂ ಅರ್ಹತೆಯ ಆಧಾರದ ಮೇಲೆ ಸರ್ಕಾರಿ ಸೇವೆಗೆ ಆಯ್ಕೆಯಾಗಿದ್ದು, ಜನರ ಸೇವೆ ಮಾಡುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಬಡವರು ಹಾಗೂ ಧ್ವನಿಯಿಲ್ಲದ ಜನರ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದಾಗ ಮಾತ್ರ ಸರ್ಕಾರಿ ಸೇವೆಗೆ ಬಂದಿರುವುದು ಸಾರ್ಥಕವಾಗುತ್ತದೆ ಎಂದರು.

ಅಧಿಕಾರಿಗಳು ಸಾರ್ವಜನಿಕರೊಂದಿಗೆ ಮಾನವೀಯತೆಯಿಂದ ನಡೆದುಕೊಳ್ಳಬೇಕು. ಅರ್ಜಿಯನ್ನು ಪರಿಶೀಲಿಸದೇ ಅಥವಾ ಸಮಸ್ಯೆಯನ್ನು ಆಲಿಸದೇ ಸಾರ್ವಜನಿಕರನ್ನು ಹಿಂದಕ್ಕೆ ಕಳುಹಿಸುವ ಮನೋಭಾವವನ್ನು ಕೈಬಿಡಬೇಕು. ಜನರ ಸಮಸ್ಯೆಗಳನ್ನು ತಮ್ಮದೇ ಸಮಸ್ಯೆಗಳೆಂದು ಪರಿಗಣಿಸಿ ಸ್ಪಂದಿಸುವ ಮೂಲಕ ಉತ್ತಮ ಆಡಳಿತ ನೀಡಬೇಕು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ್ ಅವರು ಸಾಮಾನ್ಯ ಜನರು ಕಚೇರಿಗೆ ಬಂದಾಗಲೂ ಅವರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಉತ್ತಮ ಅಧಿಕಾರಿ ಎಂದು ಬಸವರಾಜ ಶಿವಣ್ಣನವರ ಪ್ರಶಂಸಿಸಿದರು. ಜಿಲ್ಲೆ, ತಾಲೂಕು ಹಾಗೂ ರಾಜ್ಯಕ್ಕೆ ಇಂತಹ ಜನಪರ ಮನೋಭಾವದ ಅಧಿಕಾರಿಗಳ ಅಗತ್ಯವಿದೆ ಎಂದರು.

ಜನರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ದೊರೆತರೆ, ಅವರು ತಮ್ಮ ಉದ್ಯೋಗ, ಕೃಷಿ ಹಾಗೂ ದೈನಂದಿನ ಚಟುವಟಿಕೆಗಳಲ್ಲಿ ನೆಮ್ಮದಿಯಿಂದ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ಮೂಲಕ ಸಾರ್ವಜನಿಕರ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ.

ಪ್ರಜಾಸೇವೆ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಮೂಲಕ ಮುಖ್ಯಮಂತ್ರಿ ಅವರ ಜನಪರ ಕನಸನ್ನು ಸಾಕಾರಗೊಳಿಸಬೇಕು ಎಂದು ಬಸವರಾಜ ಶಿವಣ್ಣನವರ ಹೇಳಿದರು.

Related Posts

ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

You cannot copy content of this page