CHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ
HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ
ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ ಮುಷ್ಕರದ ಸಂದರ್ಭದಲ್ಲಿ ಸಂಘಟನೆಯ ಗೌರವಾಧ್ಯಕ್ಷರು ಹಾಗೂ ಇತರೆ CHO ಸಿಬ್ಬಂದಿಗಳು HIO ಮತ್ತು PHCO ಸಿಬ್ಬಂದಿಯನ್ನು ವಜಾಗೊಳಿಸಬೇಕು ಹಾಗೂ ಆರೋಗ್ಯ ಇಲಾಖೆಯ ಖಾಯಂ ನೌಕರರು ಯಾವುದೇ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘದ ಜಿಲ್ಲಾ ಶಾಖೆ ಹಾವೇರಿ ವತಿಯಿಂದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ನೌಕರರ ಸಂಘದ ಪದಾಧಿಕಾರಿಗಳು, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಈ ವಿಚಾರವನ್ನು ಇಲಾಖೆಯ ಮೇಲಾಧಿಕಾರಿಗಳು ಮತ್ತು ಆರೋಗ್ಯ ಸಚಿವರ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದರು.
‘ಈ ರೀತಿಯ ಹೇಳಿಕೆ ಖಂಡನೀಯ’
ಮನವಿ ಸ್ವೀಕರಿಸಿದ ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಮಾತನಾಡಿ, ಈ ರೀತಿಯಾಗಿ ಮಾತನಾಡಿರುವುದು ತಪ್ಪು ಹಾಗೂ ಖಂಡನೀಯ ಎಂದು ವಿಷಾದ ವ್ಯಕ್ತಪಡಿಸಿದರು.
ಈ ಕುರಿತು ಸಲ್ಲಿಸಲಾಗಿರುವ ಮನವಿಯನ್ನು ತಕ್ಷಣವೇ ಇಲಾಖೆಯ ಆಯುಕ್ತರು ಹಾಗೂ ನಿರ್ದೇಶಕರ ಗಮನಕ್ಕೆ ತರುವುದಾಗಿ ತಿಳಿಸಿದರು.
HIO, PHCO ಸಿಬ್ಬಂದಿಗೆ ನೌಕರರ ಸಂಘದ ಬೆಂಬಲ
ಮನವಿ ಸ್ವೀಕರಿಸಿ ಮಾತನಾಡಿದ ಹಾವೇರಿ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಮಲ್ಲೇಶ ಕರಿಗಾರ, ಆರೋಗ್ಯ ಇಲಾಖೆಯ ತಳಮಟ್ಟದಲ್ಲಿ, ವಿಶೇಷವಾಗಿ ಗ್ರಾಮೀಣ ಜನರಿಗೆ ಮನೆ ಬಾಗಿಲಿಗೆ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ HIO ಹಾಗೂ PHCO ಸಿಬ್ಬಂದಿಗಳು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇಂತಹ ಸಿಬ್ಬಂದಿಗಳ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
ಈ ವಿಚಾರವನ್ನು ನೌಕರರ ಸಂಘದ ರಾಜ್ಯಾಧ್ಯಕ್ಷರ ಗಮನಕ್ಕೆ ತಂದು, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು. HIO ಮತ್ತು PHCO ಸಿಬ್ಬಂದಿಗಳ ಪರವಾಗಿ ನೌಕರರ ಸಂಘ ಯಾವತ್ತೂ ಬೆಂಬಲವಾಗಿ ನಿಲ್ಲಲಿದೆ ಎಂದು ಮಲ್ಲೇಶ ಕರಿಗಾರ ತಿಳಿಸಿದರು.
ಒಗ್ಗಟ್ಟು ಪ್ರದರ್ಶಿಸಿದ ಆರೋಗ್ಯ ಇಲಾಖಾ ಸಿಬ್ಬಂದಿ
ಈ ಸಂದರ್ಭದಲ್ಲಿ ಹಾವೇರಿ ಜಿಲ್ಲಾ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಸಂಘದ ಅಧ್ಯಕ್ಷ ಮಾಲತೇಶ ಕಂಬಳಿ, ಖಜಾಂಚಿ ಸುಧಾ ಕಾಮಣ್ಣವರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಅಧ್ಯಕ್ಷರಾದ ಪುಷ್ಪಾ ಕೊಪ್ಪದ, ಸರೋಜಾ ಹರಿಜನ, ಜಿಲ್ಲಾ ನೌಕರರ ಸಂಘದ ನಿರ್ದೇಶಕರಾದ ಪರಮೇಶ ಪಾಟೀಲ, ಅಣ್ಣಪ್ಪ ತೋಟದ, ಸಿದ್ಧಿ ಸಿಸ್ಟರ್, ಚಂದ್ರಶೇಖರ ಹಿತ್ತಲಮನಿ ಸೇರಿದಂತೆ ಹಾವೇರಿ ಜಿಲ್ಲೆಯ ವಿವಿಧ ತಾಲೂಕುಗಳ ಆರೋಗ್ಯ ನಿರೀಕ್ಷಣಾಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಿಬ್ಬಂದಿ ಒಗ್ಗಟ್ಟು ಪ್ರದರ್ಶಿಸಿ, ತಮ್ಮ ವಿರುದ್ಧದ ಅವಹೇಳನಕಾರಿ ಹೇಳಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.








