ಮಾರ್ಚ 1ರಿಂದ 20ರವರೆಗೆ ಉತ್ತರ ಕನ್ನಡ ಜಿಲ್ಲೆಯ 34 ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಅವರವರ ಕಾಲೇಜಿನ ಸಮವಸ್ತ್ರಧರಿಸಿ ಪರೀಕ್ಷೆ ಎದುರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಪರೀಕ್ಷಾ ಕೊಠಡಿ ಹೊರಭಾಗ ಕುಡಿಯುವ ನೀರಿನ ವ್ಯವಸ್ಥೆಯಿರಲಿದ್ದು, ಕೊಠಡಿಯೊಳಗೆ ನೀರು ಪೂರೈಕೆ ಮಾಡುವುದನ್ನು ನಿಷೇಧಿಸಲಾಗಿದೆ.
ಈ ಬಾರಿ ಜಿಲ್ಲೆಯಲ್ಲಿ 13,974 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಈ ಪರೀಕ್ಷೆ ಎದುರಿಸಲಿದ್ದಾರೆ. ಸಿಸಿ ಕ್ಯಾಮರಾ ಎದುರೇ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಯ ಬಂಡಲ್ ತೆರೆಯುವುದನ್ನು ಕಡ್ಡಾಯ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ತಲುಪಿಸಲು ತಹಶೀಲ್ದಾರ್, ಶಿಕ್ಷಣಾಧಿಕಾರಿ, ಹಿರಿಯ ಪ್ರಾಂಶುಪಾಲರನ್ನು ಒಳಗೊಂಡ 14 ಮಾರ್ಗಾಧಿಕಾರಿಗಳ ತಂಡ ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಮತ್ತು ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟದ ವಾಹನಗಳಿಗೆ ಪೋಲಿಸ್ ಭದ್ರತೆ ಒದಗಿಸಲಾಗುತ್ತಿದ್ದು, ಪ್ರಶ್ನೆ ಪತ್ರಿಕೆಯನ್ನಿರಿಸುವ ಕಾರವಾರ ಮತ್ತು ಶಿರಸಿ ಖಜಾನೆಗೆ ಸಹ ಬಿಗಿ ಪೊಲೀಸ್ ಭದ್ರತೆ ನೀಡಲಾಗುತ್ತಿದೆ.
ಪರೀಕ್ಷಾ ಕೇಂದ್ರಗಳಿಗೆ ಮಂಡಳಿಯಿoದ ಸಂಚಾರಿ ಜಾಗೃತ ದಳ, ಸ್ಥಾನಿಕ ಜಾಗೃತ ದಳ ನೇಮಕ ಮಾಡಲಾಗಿದೆ. ಕೇಂದ್ರಗಳಲ್ಲಿ ಪ್ರತಿ ಕೊಠಡಿಯಲ್ಲಿ ನಿಗದಿತ ವಿದ್ಯಾರ್ಥಿಗಳ ಸಂಖ್ಯೆ, ನೋಂದಣಿ ಸಂಖ್ಯೆಗಳನ್ನು ಹಾಕಲಾಗುತ್ತದೆ. ಕೊಠಡಿಗಳಲ್ಲಿ ಸಾಕಷ್ಟ್ಟು ಗಾಳಿ, ಬೆಳಕು ಹಾಗೂ ಶುಚಿತ್ವ ಕಾಪಾಡುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. `ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಅಧೀಕ್ಷಕರನ್ನೊಳಗೊಂಡoತೆ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸಬೇಕು’ ಎಂದವರು ಸೂಚನೆ ನೀಡಿದ್ದಾರೆ.
`ಪರೀಕ್ಷಾ ಕೇಂದ್ರದ ಸುತ್ತಲು 200 ಮೀ ವ್ಯಾಪ್ತಿಯಲ್ಲಿ ಪರೀಕ್ಷಾ ದಿನದಂದು ನಿಷೇದಾಜ್ಞೆ ಜಾರಿಯಾಗಲಿದೆ. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಬೇಕು’ ಎಂದವರು ಹೇಳಿದ್ದಾರೆ.