ಸಿಡಿಲಿನ ಆರ್ಭಟಕ್ಕೆ ರೈತ ಬಲಿ; ಮರದ ಕೆಳಗೆ ಆಶ್ರಯ ಪಡೆದಿದ್ದ ವೇಳೆ ದುರ್ಘಟನೆ
ಸವಣೂರು: ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತರೊಬ್ಬರು ಸಿಡಿಲಿನ ಹೊಡೆತಕ್ಕೆ ಬಲಿಯಾಗಿರುವ ದುರ್ಘಟನೆ ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ದೊಡ್ಡ ಹನುಮಂತಪ್ಪ ನಿಂಗಪ್ಪ ರಿತ್ತಿ (60) ಎಂದು ಗುರುತಿಸಲಾಗಿದೆ.
ಮಳೆಯ ವಾತಾವರಣ ನಿರ್ಮಾಣವಾಗುತ್ತಿದ್ದ ಹಿನ್ನೆಲೆಯಲ್ಲಿ ದೊಡ್ಡ ಹನುಮಂತಪ್ಪ ಅವರು ಜಮೀನಿನಲ್ಲಿದ್ದ ಮರದ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ಏಕಾಏಕಿ ಸಿಡಿಲು ಮರಕ್ಕೆ ಅಪ್ಪಳಿಸಿದ್ದು, ಸಿಡಿಲಿನ ತೀವ್ರತೆಗೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಕೃಷಿ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ನಡೆದ ಈ ದುರ್ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಘಟನೆ ಸವಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಿದೆ.






