ಅಗಸ್ಟ 16ರಿಂದಲೇ ಶಿರೂರು ( Shiruru ) ಗುಡ್ಡ ಕುಸಿತದ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಿರುವ ಬಗ್ಗೆ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.
ವಕೀಲ ಶಿವಾಜಿ ಮಲಯಾಳಿ ಹಾಗೂ ಕೆ ಆರ್ ಸುಭಾಷ್ ಚಂದ್ರನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿದ್ದು, ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಈ ಮಾಹಿತಿ ನೀಡಿದ್ದಾರೆ.
ಅರ್ಜಿದಾರ ಪರ ವಕೀಲರು `ಸರ್ಕಾರ ಈಶ್ವರ ಮಲ್ಪೆ ಅವರ ನೆರವು ಪಡೆಯುತ್ತಿಲ್ಲ. ಅವರಿಗೆ ರಕ್ಷಣಾ ಕಾರ್ಯ ನಡೆಸಲು ಬಿಡುತ್ತಿಲ್ಲ’ ಎಂದು ಆಕ್ಷೇಪಿಸಿದರು.
ಇದನ್ನು ತಳ್ಳಿಹಾಕಿದ ಶಶಿಕಿರಣ ಶೆಟ್ಟಿ, `ಎನ್ಡಿಆರ್ಎಫ್, ಎಸ್ಡಿಆರ್ಎಫ್, ಸೇನಾ ಸಿಬ್ಬಂದಿ ಸೇರಿ 171 ಜನ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮನುಷ್ಯರಿಗೆ ಸಾಧ್ಯವಾಗಬಹುದಾದ ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಲಾಗಿದೆ’ ಎಂದರು. `ಮಣ್ಣಿನ ಅಡಿ ಸಿಲುಕಿದ್ದ 11 ಜನರ ಪೈಕಿ 8 ಜನರ ಮೃತ ದೇಹಗಳನ್ನು ಪತ್ತೆ ಹಚ್ಚಿ ಹೊರತೆಗೆಯಲಾಗಿದೆ. ಇನ್ನೂ ಮೂವರ ಪತ್ತೆಯಾಗಬೇಕಿದೆ. ಆದರೆ, ನದಿಯಲ್ಲಿ ನೀರಿನ ಪ್ರಮಾಣ ಹಾಗೂ ರಭಸ ಹೆಚ್ಚಾಗಿದೆ. ಅಗಸ್ಟ 16ರಿಂದ ರಕ್ಷಣಾ ಕಾರ್ಯ ಸ್ಥಗಿತಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, `ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವ ಹಾಗೂ ಪುನರ್ವಸತಿ ಕಲ್ಪಿಸುವ ಸಂಬ0ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಿ’ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 18ಕ್ಕೆ ಮುಂದೂಡಿತು.
Discussion about this post