ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರ್ಚ 21ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. 125 ಸರಕಾರಿ, 150 ಅನುದಾನಿತ, 92 ಅನುದಾನರಹಿತ, 25 ವಸತಿ ಶಾಲೆ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 74 ಪರೀಕ್ಷಾ ಕೇಂದ್ರಗಳಲ್ಲಿ 20035 ವಿದ್ಯಾರ್ಥಿಗಳು ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಎದುರಿಸಲಿದ್ದಾರೆ.
ಪ್ರಶ್ನೆ ಪ್ರತಿಕೆ ಸೋರಿಕೆ ಬಗ್ಗೆ ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಪೊಲೀಸರು ಎಚ್ಚರಿಕೆವಹಿಸಿದ್ದಾರೆ. ವ್ಯಾಟ್ಸಾಪ್ಗಳಲ್ಲಿ ನಕಲು ಪ್ರಶ್ನೆ ಪ್ರತಿಕೆಗಳನ್ನು ಪ್ರಕಟಿಸುವುದು ಹಾಗೂ ಇನ್ನಿತರ ಕುಚೋದ್ಯ ಚಟುವಟಿಕೆ ನಡೆಸುವವರ ಮೇಲೆ ನಿಗಾ ಇಟ್ಟಿದ್ದಾರೆ. ಈ ರೀತಿ ಮಾಡುವವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸೋಷಿಯಲ್ ಮೀಡಿಯಾ ಘಟಕ ನಿರಂತರವಾಗಿ ಪರಿಶೀಲಿಸುತ್ತಿದೆ.
`ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ರೀತಿಯ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷಿಪ್ರಿಯಾ ಸುದ್ದಿಗಾರರಿಗೆ ಮಾಹಿತಿ ನೀಡಿದರು. `ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಿದ್ದು, ರಾಜ್ಯ ಮತ್ತು ಜಿಲ್ಲಾ ಹಂತಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು. ಎಲ್ಲಾ ಸಿಸಿಟಿವಿಗಳ ವೆಬ್ ಕಾಸ್ಟಿಂಗ್ನ್ನು ಡ್ರೆ ರನ್ ಮಾಡಲಾಗಿದ್ದು, ಜಿಲ್ಲಾ ಪಂಚಾಯತದಲ್ಲಿ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಪ್ರಶ್ನೆಪತ್ರಿಕೆಗಳನ್ನು ಸ್ವೀಕರಿಸಿದ್ದು, ತಾಲೂಕು ಖಜಾನೆಗಳಲ್ಲಿ ಪೊಲೀಸ್ ಭದ್ರತೆಯಲ್ಲಿರಿಸಲಾಗಿದೆ’ ಎಂದವರು ವಿವರಿಸಿದರು.
`ಈಗಾಗಲೇ ನಡೆದಿರುವ ಪೂರ್ವಭಾವಿ ಪರೀಕ್ಷೆಯಲ್ಲಿ ಶೇ 35ಕ್ಕಿಂತ ಕಡಿಮೆ ಅಂಕಪಡೆದಿದ್ದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಿ, ಹೆಚ್ಚು ಅಂಕಗಳನ್ನು ಪಡೆಯುವ ಕಾಳಜಿವಹಿಸಲಾಗಿದೆ. ಪರೀಕ್ಷೆಯಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವ ಅವ್ಯವಹಾರ ತಡೆಯುವ ಮುನ್ನಚ್ಚರಿಕೆವಹಿಸಲಾಗಿದ್ದು, ಪರೀಕ್ಷಾ ಕೇಂದ್ರಕ್ಕೆ ಮತ್ತು ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ಸಾಗಾಟಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸಲು ಸೂಚಿಸಲಾಗಿದೆ’ ಎಂದರು.